Home KARNATAKA ಜನರಲ್ಲಿ ಆತ್ಮವಿಶ್ವಾಸ ತುಂಬುವ ನಿರ್ದಿಷ್ಟ ಯೋಜನೆಗಳು ಪ್ರಧಾನಿ ಬಳಿ ಇಲ್ಲ: ಸಿದ್ದರಾಮಯ್ಯ ಅಸಮಾಧಾನ

ಜನರಲ್ಲಿ ಆತ್ಮವಿಶ್ವಾಸ ತುಂಬುವ ನಿರ್ದಿಷ್ಟ ಯೋಜನೆಗಳು ಪ್ರಧಾನಿ ಬಳಿ ಇಲ್ಲ: ಸಿದ್ದರಾಮಯ್ಯ ಅಸಮಾಧಾನ

175
0
SHARE

ಟ್ವೀಟ್ ಮೂಲಕ ಪ್ರಧಾನಿ ಭಾಷಣಕ್ಕೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತಾಗಿದೆ ಪ್ರಧಾನಿ ಭಾಷಣಗಳು. ನಿಯಂತ್ರಣ ಮೀರಿ ಹರಡುತ್ತಿರುವ ಕೊರೊನಾ ಸೋಂಕಿನಿಂದ ತತ್ತರಕ್ಕೀಡಾಗಿರುವ ಜನರಲ್ಲಿ ಆತ್ಮವಿಶ್ವಾಸ ತುಂಬುವ ಯಾವ ನಿರ್ದಿಷ್ಟ ಯೋಜನೆಗಳ ಪ್ರಸ್ತಾವಗಳೇ ಇಲ್ಲದ ಪ್ರಧಾನಿ ಭಾಷಣ, ಕೈಲಾಗದ ನಾಯಕನ ಗೋಳಾಟದಂತಿತ್ತು ಎಂದು ವ್ಯಂಗ್ಯವಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣವನ್ನು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಲೇವಡಿ ಮಾಡಿದ್ದಾರೆ.

ಬಡವರಿಗೆ ಉಚಿತ ಆಹಾರ ಧಾನ್ಯ ನೀಡುವ ಗರೀಬ್ ಕಲ್ಯಾಣ ಯೋಜನೆ ನವೆಂಬರ್ ವರೆಗೆ ಮುಂದುವರಿಸಿರುವುದು ಸ್ವಾಗತಾರ್ಹ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಸೋನಿಯಾ ಗಾಂಧಿಯವರು ತಿಂಗಳ ಹಿಂದೆಯೇ ಈ ಬೇಡಿಕೆ ಇಟ್ಟಿದ್ದರು. ಅದನ್ನು ಒಪ್ಪಿಕೊಂಡದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ.

ಕೊರೊನಾ ಸೋಂಕಿನ ತೀವ್ರತೆ ನೋಡಿದರೆ ಇದು 2-3 ತಿಂಗಳೊಳಗೆ ಕೊನೆಗೊಳ್ಳುವಂತಹದ್ದಲ್ಲ. ದೇಶದಲ್ಲಿ ಹಸಿವಿನ‌ ಸಮಸ್ಯೆ ಇನ್ನಷ್ಟು ಭೀಕರವಾಗಲಿದೆ. ಆದ್ದರಿಂದ ನಾವು ಜಾರಿಗೊಳಿಸಿದ್ದ ಅನ್ನಭಾಗ್ಯ ಯೋಜನೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಬೇಕೆಂದು ಪ್ರಧಾನಿ ಅವರನ್ನು ಒತ್ತಾಯಿಸುತ್ತೇನೆ. ಆಸ್ಪತ್ರೆಗಳು ತುಂಬಿ ಹೋಗಿವೆ. ಆಮ್ಲಜನಕ ಪೂರೈಕೆ ವ್ಯವಸ್ಥೆ, ವೆಂಟಿಲೇಟರ್‌ಗಳ ತೀವ್ರ ಕೊರತೆ ಇದೆ. ದುಬಾರಿ ಚಿಕಿತ್ಸೆ ವೆಚ್ಚದಿಂದಾಗಿ ಕೊರೊನಾ ಸೋಂಕಿಗಿಂತ, ಚಿಕಿತ್ಸೆಗೆ ಜನ ಹೆದರುವಂತಾಗಿದೆ. ಈ ಬಗ್ಗೆ ರಾಜ್ಯಗಳಿಗೆ ಕೇಂದ್ರ ನೆರವು ಘೋಷಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.  ಸತತ 23ನೇ ದಿನ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಾಗಿದ್ದು, ಆಹಾರ ಧಾನ್ಯ, ತರಕಾರಿ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆಯೂ ಏರುತ್ತಿದೆ. ಈ ತೈಲ ಬೆಲೆ ಇನ್ನೆಷ್ಟು ದಿನಗಳ ಕಾಲ ಏರಲಿದೆ ಎಂದಾದರೂ ನರೇಂದ್ರ ಮೋದಿ ಹೇಳಿಬಿಟ್ಟಿದ್ದರೆ ಜನ ಕೆಟ್ಟ ದಿನಗಳಿಗೆ ಹೊಂದಿಕೊಳ್ಳಲು ಸಿದ್ಧವಾಗುತ್ತಿದ್ದರು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here