
Rahul Gandhi.. ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್ ಗಾಂಧಿ ಪೊಲೀಸರ ವಶಕ್ಕೆ
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕೇಸ್ಗೆ ಸಂಬಂಧಪಟ್ಟಂತೆ ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ 2ನೇ ಬಾರಿ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ. ಇಡಿ ವಿಚಾರಣೆ ನೆಪದಲ್ಲಿ ಕೇಂದ್ರ ಸರ್ಕಾರದಿಂದ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ನವದೆಹಲಿಯಲ್ಲಿ ಪ್ರತಿಭಟನಾನಿರತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರ ಜತೆ ರಸ್ತೆ ಮೇಲೆ ಕುಳಿತು ರಾಹುಲ್ ಗಾಂಧಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ದೆಹಲಿಯಲ್ಲಿ ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು ಅವರನ್ನು ಪೊಲೀಸ್ ವಾಹನದಲ್ಲಿ ಕರೆದೊಯ್ದಿದ್ದಾರೆ. ರಾಹುಲ್ ಗಾಂಧಿ ಅವರ ಜೊತೆ ದೀಪೇಂದರ್ ಹೂಡಾ, ಇತರೆ ಕಾಂಗ್ರೆಸ್ ಸಂಸದರು ಮತ್ತು ಕಾರ್ಯಕರ್ತರನ್ನು ಕೂಡ ವಶಕ್ಕೆ ಪಡೆಯಲಾಗಿದೆ.