ಎಐಸಿಸಿ ಅಧ್ಯಕ್ಷರ ಚುನಾವಣೆಗೆ ಅಧಿಸೂಚನೆ ಪ್ರಕಟ – ಸೆ.24ರಿಂದ ನಾಮಪತ್ರ ಸಲ್ಲಿಕೆ

ರಾಷ್ಟ್ರೀಯ

ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಕೇಂದ್ರ ಚುನಾವಣಾ ಪ್ರಾಧಿಕಾರ ಗುರುವಾರ ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆಯ ಪ್ರಕಾರ, ಗುರುವಾರದಿಂದ ನಾಮಪತ್ರಗಳು ಲಭ್ಯವಿದ್ದು, ಸೆಪ್ಟೆಂಬರ್ 24 ಮತ್ತು ಸೆಪ್ಟೆಂಬರ್ 30 ರ ನಡುವೆ ನಾಮಪತ್ರಗಳನ್ನು ಸಲ್ಲಿಸಲಾಗುವುದು. ಅಕ್ಟೋಬರ್ 1 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅದೇ ದಿನ ಕಣದಲ್ಲಿ ಉಳಿಯುವ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 8 ಕೊನೆಯ ದಿನವಾಗಿದ್ದು, ನಂತರ ಅಂತಿಮ ಪಟ್ಟಿಯನ್ನು ಹೊರತರಲಾಗುವುದು. ಅಕ್ಟೋಬರ್ 17 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದೆ. ಮೂಲಗಳ ಪ್ರಕಾರ ಅಶೋಕ್ ಗೆಹ್ಲೋಟ್ ಮತ್ತು ಶಶಿ ತರೂರ್ ನಡುವೆ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ.

ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ರು. ಬಳಿಕ ಅವರು ರಾಹುಲ್ ಗಾಂಧಿಯವರ ‘ಭಾರತ್ ಜೋಡೋ ಯಾತ್ರೆ’ಯಲ್ಲಿ ಪಾಲ್ಗೊಳ್ಳಲು ಕೇರಳಕ್ಕೆ ತೆರಳಿದರು. ಚುನಾವಣೆ ನ್ಯಾಯಸಮ್ಮತವಾಗಿ ನಡೆಯಲಿದ್ದು, ಯಾವುದೇ ಅಭ್ಯರ್ಥಿಯನ್ನು ಬೆಂಬಲಿಸುವುದಿಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಭೆಯಲ್ಲಿ ರಾಜಸ್ಥಾನದ ವಿಷಯವೂ ಚರ್ಚೆಯಾಗಿದೆ, ಆದರೆ ಅಧಿಕೃತವಾಗಿ ಈ ಬಗ್ಗೆ ಏನನ್ನೂ ಹೇಳಲಾಗಿಲ್ಲ. ಮುಂದಿನ ವಾರ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಗೆಹ್ಲೋಟ್ ನಾಮಪತ್ರ ಸಲ್ಲಿಸಬಹುದು. .

ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಲು ಆಗ್ರಹ

ಮತ್ತೊಂದೆಡೆ ರಾಹುಲ್ ಗಾಂಧಿ ಅವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಬೇಕೆಂಬ ಆಗ್ರಹ ಮುಂದುವರಿದಿದೆ. ರಾಹುಲ್‌ ಕಠಿಣ ಪರಿಶ್ರಮಿ, ಹೋರಾಟಗಾರ ಎಂದು ಕಾಂಗ್ರೆಸ್ ನಾಯಕ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆದ್ಯತೆಯನ್ನು ಪೈಲೆಟ್‌ ಸೂಚಿಸಿದ್ದಾರೆ. ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸ್ಪರ್ಧಿಸಿದ್ರೆ.

ಪೈಲೆಟ್‌ ಬೆಂಬಲಿಸುತ್ತಾರಾ ಅನ್ನೋ ಪ್ರಶ್ನೆಗೆ ಯಾರು ಚುನಾವಣೆಗೆ ಸ್ಪರ್ಧಿಸಿದರೂ ಪರವಾಗಿಲ್ಲ,ಚುನಾವಣೆಯ ಕೊನೆಯಲ್ಲಿ ಬಲಿಷ್ಠ ಕಾಂಗ್ರೆಸ್‌ ಅಸ್ತಿತ್ವಕ್ಕೆ ಬರಲಿದೆ. ಅದಕ್ಕಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು, ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಸಾಧ್. ಯಾರು ಸ್ಪರ್ಧಿಸುತ್ತಾರೆ ಎಂದು ಸದ್ಯಕ್ಕೆ ಊಹಿಸಲು ಸಾಧ್ಯವಿಲ್ಲ ಎಂದು ಹೇಳಿದ ಅವರು ಈ ವಿಷಯ ಸೆಪ್ಟೆಂಬರ್ 24ರ ನಂತರವಷ್ಟೇ ಸ್ಪಷ್ಟವಾಗಲಿದೆ ಎಂದಿದ್ದಾರೆ.